ಝೆನ್ ಮಾಸ್ಟರ್ ಹಕುಯಿನ್ ನ ಪ್ರತಿಕ್ರಿಯೆ

ಒಂದು ಹಳ್ಳಿಯಲ್ಲಿ, ಮದುವೆಯಾಗದ ಒಬ್ಬ ಸುಂದರ ಯುವತಿ ಗರ್ಭಿಣಿಯಾದಳು. ಅವಳ ತಂದೆ ತಾಯಿಗೆ ಸಿಕ್ಕಾಪಟ್ಟೆ ಸಿಟ್ಟು ಬಂತು. ಮಗುವಿನ ತಂದೆ ಯಾರೆಂದು ಕೇಳಿದಾಗ, ಗಲಿಬಿಲಿಗೊಳಗಾದ ಯುವತಿ ಗಾಬರಿಯಲ್ಲಿ, ಅದೇ ಊರಿನಲ್ಲಿ ವಾಸವಾಗಿದ್ದ ಝೆನ್ ಮಾಸ್ಟರ್ ಹಕುಯಿನ್ ನ ಹೆಸರು ಹೇಳಿಬಿಟ್ಟಳು.

ತಂದೆ ತಾಯಿ ಮಾಸ್ಟರ್ ಮನೆ ಬಾಗಲಿಗೆ ಬಂದು ಗಲಾಟೆ ಮಾಡತೊಡಗಿದರು. ವಿಷಯ ತಿಳಿದುಕೊಂಡ ಮಾಸ್ಟರ್ “ಹೌದಾ” ಎಂದು ಉತ್ತರಿಸಿ ಸುಮ್ಮನಾದ.

ಈ ಘಟನೆಯಿಂದ ಊರಲ್ಲಿ ಮಾಸ್ಟರ್ ನ ಪ್ರತಿಷ್ಠೆಗೆ ಭಾರೀ ಧಕ್ಕೆಯಾಯಿತು. ಊರ ಜನರೆಲ್ಲ ಅವನನ್ನು ದೂಷಿಸತೊಡಗಿದರು.

ಕೆಲ ತಿಂಗಳುಗಳ ನಂತರ ಆ ಯುವತಿ ಹೆಣ್ಣು ಮಗುವನ್ನು ಹೆತ್ತಳು. ತಂದೆ ತಾಯಿ ಆ ಮಗುವನ್ನು ಎತ್ತಿಕೊಂಡು ಮಾಸ್ಟರ್ ಮನೆಗೆ ಬಂದರು. ಮಗುವನ್ನು ಅವನೇ ಸಾಕಬೇಕು ಎಂದು ಒತ್ತಾಯ ಮಾಡತೊಡಗಿದರು. ಮಾಸ್ಟರ್ “ಹೌದಾ” ಎಂದು ಉತ್ತರಿಸಿ, ಮಗುವನ್ನು ತನ್ನ ಸುಪರ್ದಿಗೆ ಪಡೆದುಕೊಂಡ.

ಎಷ್ಟೋ ತಿಂಗಳು ಮಾಸ್ಟರ್ ಮಗುವನ್ನು ಅಕ್ಕರೆಯಿಂದ ಬೆಳೆಸಿದ. ಆ ಯುವತಿ ಸುಳ್ಳು ಹೇಳಿದ ಪಾಪಪ್ರಜ್ಞೆ ಸಹಿಸಲಾಗದೇ, ತನ್ನ ತಂದೆ ತಾಯಿಯರಿಗೆ, ಅದೇ ಊರಿನ ಒಬ್ಬ ಯುವಕ ಇದಕ್ಕೆ ಕಾರಣ ಎಂದು ನಿಜ ಹೇಳಿದಳು.

ಕೂಡಲೇ ಯುವತಿಯ ತಂದೆ ತಾಯಿ, ಮಾಸ್ಟರ್ ಮನೆಗೆ ಬಂದು ನಡೆದ ವೃತ್ತಾಂತವನ್ನೆಲ್ಲ ಹೇಳಿ, ಅವನ ಕ್ಷಮೆ ಕೇಳಿ ಮಗುವನ್ನು ವಾಪಸ್ಸು ಕೊಡಬೇಕೆಂದು ಬೇಡಿಕೊಂಡರು.

ಮಾಸ್ಟರ್ “ಹೌದಾ” ಎಂದು ಉತ್ತರಿಸಿ, ಮಗುವನ್ನು ಅವರಿಗೆ ಒಪ್ಪಿಸಿದ.

(ಸಂಗ್ರಹ ಮತ್ತು ಅನುವಾದ : ಚಿದಂಬರ ನರೇಂದ್ರ)

Leave a Reply